ಉಡುಪಿ: ಮೇ 21-23 ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ ಮೇ.18 (ಉಡುಪಿ ಟೈಮ್ಸ್ ವರದಿ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ, ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವು ಮೇ. 21 ರಿಂದ 23 ರ ವರೆಗೆ ದೊಡ್ಡಣಗುಡ್ಡೆಯ ಪುಷ್ಪ ಹರಾಜು ಕೇಂದ್ರದಲ್ಲಿ ನಡೆಯಲಿದೆ. 

ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಈ ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಾಗೂ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆ ಗುತ್ತಿ, ಹಾಗೂ ಇತರೆ ತಳಿಗಳ ಒಟ್ಟು 30 ಟನ್ ನಷ್ಟು ಮಾವು ಮಾರಾಟಕ್ಕೆ 15-20 ರೈತರು ಆಗಮಿಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ಮಾವು ಪ್ರದರ್ಶನ ಮತ್ತು ಮಾರಾಟ ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಇನ್ನು ಈ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ.20 ರೊಳಗಾಗಿ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಉಡುಪಿ (0820-2531950) ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!