ಕೂಡಲೇ ಪ್ರವಾಹ ನೆರವು, ಬೆಳೆ ನಷ್ಟ ಸಮೀಕ್ಷೆ ವರದಿ ಸಲ್ಲಿಸಿ- ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಮತ್ತು ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಮಳೆಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಿಸಿಗಳು, ಸಹಾಯಕ ಆಯುಕ್ತರು ಮತ್ತು ಕೃಷಿ ಅಧಿಕಾರಿಗಳು ಇನ್ನೆರಡು ಮೂರು ದಿನಗಳಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು 72 ಗಂಟೆಗಳಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮಾರ್ಗಸೂಚಿ ಯಂತೆ ಕೂಡಲೇ ಕಂದಾಯ, ಆರ್‌ಡಿಪಿಆರ್ ಮತ್ತು ಸಣ್ಣ ನೀರಾವರಿ ಇಲಾಖೆಗಳು ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದ ಕಡತಗಳನ್ನು ತೆರವುಗೊಳಿಸಬೇಕು ಎಂದು ಅವರು ಅವರಿಗೆ ತಿಳಿಸಿದರು.
ಯಾವುದೇ ಅಧಿಕಾರಿಗಳು ‘ನಾಳೆ ಬನ್ನಿ’ ಎಂಬ ಸಬೂಬು ನೀಡಬಾರದು. ಬೆಳೆ ನಷ್ಟದ ಸಮೀಕ್ಷೆ ವರದಿಗಳನ್ನು ವಿಳಂಬ ಮಾಡದೆ ಶ್ರದ್ಧೆಯಿಂದ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ. ತುರ್ತು ಕಾಮಗಾರಿಗೆ ಅಡ್ಡಿಯಾಗದಂತೆ ಮುಂದಿನ 15 ದಿನಗಳ ಕಾಲ ಅಧಿಕಾರಿಗಳಿಗೆ ರಜೆ ನೀಡಬಾರದು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಕಾಮಗಾರಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬೆಳೆ ನಷ್ಟ ಹಾಗೂ ಮನೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿ ಗಳು ಮೂರು ದಿನಗಳೊಳಗೆ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬಳಿಕ ಮುಖ್ಯ ಕಾರ್ಯದರ್ಶಿಯವರಿಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳ ವೈಯಕ್ತಿಕ (ಪಿ.ಡಿ) ಖಾತೆಯಲ್ಲಿ 728.85 ಕೋಟಿ ಲಭ್ಯವಿದ್ದು, ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.
ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಜನರನ್ನು ಸ್ಥಳಾಂತರಿಸುವ ಮೂಲಕ ಸಾವು, ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು