ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ
ಮಂಗಳೂರು ಡಿ.21 : ನಗರದ ಖಾಸಗಿ ಶಾಲೆಯೊಂದರಲ್ಲಿ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಕರು ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನೂ ನೀಡಿದ್ದರು. ನಿನ್ನೆ ಮತ್ತೆ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು 8ನೇ ತರಗತಿಯ ವಿದ್ಯಾರ್ಥಿಗೆ `ನಿನ್ನನ್ನು ಹೊರಗೆ ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿಯು ಸಂಜೆ ಶಾಲೆ ಬಿಟ್ಟ ಬಳಿಕ ಬಸ್‍ಗಾಗಿ ತಂಗುದಾಣದಲ್ಲಿ ಕಾಯುತ್ತಿದ್ದಾಗ 9ನೇ ತರಗತಿಯ 4 ಮಂದಿ ವಿದ್ಯಾರ್ಥಿಗಳು ಏಕಾಏಕಿ ಬಂದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ತಡೆದು ಗಾಯಗೊಂಡ ವಿದ್ಯಾರ್ಥಿಯನ್ನು ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಕಂಕನಾಡಿ ನಗರ ಠಾಣಾ ಪೊಲೀಸರು ಹಲ್ಲೆಗೈದ ಇಬ್ಬರು ಹಿರಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.