ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನ:ಗಣ್ಯರ ಸಂತಾಪ
ಬೆಂಗಳೂರು ಜ.3: ಲಿಂಗೈಕ್ಯರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ನಿಧನಕ್ಕೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿದ್ಧೇಶ್ವರ ಸ್ವಾಮೀಜಿಯವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರ ಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಕಂಬನಿ ಮಿಡಿದಿದ್ದು, ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.” ಹಾಗೂ “ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ “ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿ, “ತಮ್ಮ ಪ್ರವಚನಗಳ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದಾಸೋಹ ನೀಡಿದ ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಕ್ತರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.” ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಿಬಾರದ ನಷ್ಟ.” “ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ಮತ್ತು ಭಕ್ತವೃಂದಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಟ್ವೀಟ್ ಮಾಡಿ, ” ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.” “ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ” ಎಂದಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿ, “ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು” ಎಂದು ಬರೆದುಕೊಂಡಿದ್ದಾರೆ