ಕಲಬುರಗಿ : ಜ.19 ರಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ- ಜಿಲ್ಲಾಧಿಕಾರಿಯಿಂದ ಪೂರ್ವ ಭಾವಿ ಸಭೆ

ಕಲಬುರಗಿ ಜ.11 : ಪ್ರಧಾನಿ ನರೇಂದ್ರ ಮೋದಿ ಅವರು ಜ.19ರಂದು ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಈ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು, `ಸೇಡಂ ತಾಲ್ಲೂಕಿನ ಮಳಖೇಡ ಸಮೀಪದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ 60 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಪ್ರಧಾನಿ ಮೋದಿ ಅವರು ಹಕ್ಕುಪತ್ರ ವಿತರಿಸಿ, ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಗಮ ನಿರ್ವಹಣೆ ಮತ್ತು ಯಶಸ್ಸಿಗೆ 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ವೇದಿಕೆ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆಯನ್ನು ಅಚ್ಚುಕಟ್ಟಾಗಿ ಇರಬೇಕು’. `ಮುನ್ನಚ್ಚರಿಕಾ ಕ್ರಮವಾಗಿ ಕಾರ್ಯಕ್ರಮದ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ನಿಯೋಜಿಸಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾವುದೇ ಲೋಪಕ್ಕೆ ಅವಕಾಶ ಇರಬಾರದು. ಸಣ್ಣಪುಟ್ಟ ಸಮಸ್ಯೆ ಇದ್ದರೂ ತಕ್ಷಣವೇ ನನ್ನ ಗಮನಕ್ಕೆ ತರಬೇಕು’ ಎಂದು ಅವರು ಸೂಚನೆ ನೀಡಿದರು.

ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,500 ಬಸ್ ವ್ಯವಸ್ಥೆ ಮಾಡಬೇಕು' ಎಂದು ಕೆಕೆಆರ್‍ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರಿಗೆ ತಿಳಿಸಿದರು. ಹಾಗೂಮಳಖೇಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಂಜಾಗ್ರತವಾಗಿ ಸಿಎಚ್‍ಸಿ ಕೇಂದ್ರಕ್ಕೆ ಬೇಕಾಗುವ ಎಲ್ಲಾ ರೀತಿಯ ಸೌಲಭ್ಯ ಒದಗಿಸಬೇಕು’ ಎಂದು ಡಿಎಚ್‍ಒ ಡಾ.ರಾಜಶೇಖರ ಮಾಲಿ ಅವರಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಪ್ರಧಾನಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ-ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ. ಪ್ರತಿ ಕಚೇರಿಯಲ್ಲಿ ಶೇ.100 ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಅಗತ್ಯ. ಇದು ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್‍ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಡಿ. ಬದೋಲೆ, ಎಸ್.ಪಿ ಇಶಾ ಪಂತ್, ಡಿಸಿಪಿ ಅಟ್ಟೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಜಿಲ್ಲಾಧಿಕಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಸಹಾಯಕ ಆಯುಕ್ತರಾದ ಮಮತಾ ಕುಮಾರಿ, ಕಾರ್ತಿಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!