ಫೆ.20-ಜೆ.ಪಿ ನಡ್ಡಾ ಉಡುಪಿಗೆ-ಬೂತ್ ಸಮಿತಿ ಸಮಾವೇಶದ ಚಪ್ಪರ ಮುಹೂರ್ತಕ್ಕೆ ಚಾಲನೆ

ಉಡುಪಿ, ಫೆ.18 : ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಫೆ.20ರಂದು ಉಡುಪಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಫೆ. 19ರಿಂದ ಫೆ.21ರ ವರೆಗೆ ರಾಷ್ಟ್ರಾಧ್ಯಕ್ಷರು ಉಡುಪಿ, ಚಿಕ್ಕಮಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಉಡುಪಿ ಮತ್ತು ಬೈಂದೂರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ. 20ರ ಬೆಳಗ್ಗೆ 9.30ಕ್ಕೆ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿರುವ ಜೆಪಿ ನಡ್ಡಾ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆಯಲಿದ್ದಾರೆ. ಬಳಿಕ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲೆಯ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬೈಂದೂರಿಗೆ ತೆರಳಿದ್ದಾರೆ.

ಜಿಲ್ಲೆಯ 1,111 ಬೂತ್ ಗಳ ಅಧ್ಯಕ್ಷರ ಸಹಿತ 12 ಮಂದಿ ಕಾರ್ಯಕರ್ತರನ್ನು ಒಳಗೊಂಡ ಸಮಿತಿಯ ಎಲ್ಲಾ ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 13,332ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಹೊಂದಿದ್ದು, ಅನಂತರ ಬೈಂದೂರು ವಿಧಾನಸಭೆ ಕ್ಷೇತ್ರದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮುಖ್ಯ ಭಾಷಣ ಮಾಡಲಿದ್ದಾರೆ. ಈ ಸಭೆಯಲ್ಲಿ ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಹೊಂದಲಾಗಿದೆ.

ಈ ಎರಡು ಕಾರ್ಯಕ್ರಮಗಳ ಯಶಸ್ವಿಗೆ ಬೇಕಾದ ಎಲ್ಲಸಿದ್ಧತೆಯನ್ನು ಮಾಡಿಕೊಂಡಿದ್ದು, ಫೆ.20ರಂದು ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ರವರ ನೇತೃತ್ವದಲ್ಲಿ ನಡೆಯಲಿರುವ ಬೂತ್ ಸಮಿತಿ ಸಮಾವೇಶಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಚಪ್ಪರ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!