ಮಾ.1 ರಿಂದ ರಾಜ್ಯ ಸರ್ಕಾರಿ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ
ಬೆಂಗಳೂರು ಫೆ.22: 7 ನೇ ವೇತನ ಆಯೋಗ ಜಾರಿಗೆ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಪ್ರಸ್ತಾಪಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದೆ.
ಈ ಬಗ್ಗೆ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಬಜೆಟ್ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.
7ನೇ ವೇತನ ಆಯೋಗ ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ಹೊರಹಾಕಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1 ರಿಂದ ಅನಿರ್ಧಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ.