ಕೆಲ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: ಬಿ.ಎಸ್.ವೈ
ಕಲಬುರಗಿ ಮಾ.7 : ಮುಂದಿನ ವಿಧಾನ ಸಭಾ ಚುನಾವಣೆಗೆ ಬಿಜೆಪಿಯಲ್ಲಿ ಭರದ ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಬಿಜೆಪಿಯ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಇಲ್ಲಿನ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ರಾಜ್ಯಾದ್ಯಂತ ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಗೂ ನಾಲ್ಕೈದು ಹಾಲಿ ಶಾಸಕರಿಗೆ ಟಿಕೆಟ್ ಸಿಗದಿರುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಮುಗಿದ ಬಳಿಕ ನಡೆಯುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ನಿರ್ಧಾರ ಆಗಲಿದೆ ಎಂದರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಜಾದನಿ ಯಾತ್ರೆಯಲ್ಲಿ ಜನರು ಸೇರುತ್ತಿಲ್ಲ. ಮತ್ತೊಂದೆಡೆ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎಂಬುದನ್ನು ಸಾಬೀತುಪಡಿಸುವಂತಿದೆ ಎಂದರು.
ಸಚಿವರಾದ ವಿ.ಸೋಮಣ್ಣ ಹಾಗೂ ನಾರಾಯಣಗೌಡ ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅವರಷ್ಟೇ ಅಲ್ಲ ಯಾರೊಬ್ಬರೂ ಪಕ್ಷ ಬಿಡುವುದಿಲ್ಲ. ಬೇರೆ ಬೇರೆ ಪಕ್ಷಗಳಿಂದ ಬಿಜೆಪಿಗೆ ಯಾರಾದರೂ ಬರುವುದಾದರೆ ಮುಕ್ತ ಸ್ವಾಗತವಿದೆ ಎಂದು ಆಹ್ವಾನ ನೀಡಿದ ಅವರು, ಇತ್ತೀಚೆಗೆ ನಡೆದ ತ್ರಿಪುರಾ, ಮೇಘಾಲಯ ಚುನಾವಣೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದು ಸಾಬೀತಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿರುವುದು ಮತ್ತೊಮ್ಮೆ ದೃಢಪಟ್ಟಿದೆ ಎಂದರು.
ಇನ್ನು, ಬಿಜೆಪಿ ಉಮೇದುವಾರರ ಮೊದಲ ಪಟ್ಟಿ ಆದಷ್ಟು ಬೇಗ ಪ್ರಕಟಗೊಳ್ಳಲಿದೆ. ತಮ್ಮ ಪುತ್ರ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಬಹುಶಃ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಸೂಚ್ಯವಾಗಿ ಸುಳಿವು ನೀಡಿದ ಅವರು, ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.