ಕಾಂಗ್ರೆಸ್ ನ ಗ್ಯಾರಂಟಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ- ಬಿಜೆಪಿಗೆ ಸ್ಪಷ್ಟ ಬಹುಮತ- ಬಿ.ಎಸ್.ವೈ
ಯಾದಗಿರಿ ಮಾ.8 : ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಸಂಕಲ್ಪ ಯಾತ್ರೆಯಲ್ಲಿ ಸೇರುವ ಜನರನ್ನು ನೋಡಿದರೆ ವಿಜಯೋತ್ಸವ ಆಚರಣೆಗೆ ಬರುತ್ತಿದ್ದಾರೆ ಎಂದು ಭಾಸವಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರಲಿದ್ದಾರೆ. ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ, ಕಾಂಗ್ರೆಸ್ನವರು ನಾವೇ ಮುಖ್ಯಮಂತ್ರಿ ಎಂದು ಕನಸನ್ನು ಕಾಣುತ್ತಿದ್ದಾರೆ ಅದು ನನಸಾಗುವುದಿಲ್ಲ. ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಸತಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವುದಕ್ಕೆ ಯಾವುದೇ ಸತ್ಯಾಂಶ ಇಲ್ಲ. ಯಾರು ಕೂಡ ಬಿಜೆಪಿಯನ್ನು ಬಿಡುವುದಿಲ್ಲ ಎಂದರು. ಹಾಗೂ ಕಾಂಗ್ರೆಸ್, ಜೆಡಿಎಸ್ ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ ಎಂದರು.
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದ ಅವರು ಮೆರವಣಿಗೆ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ವೇಳೆ ಅವರು ಹೇಳಿದರು.