ಫೈಟರ್ ರವಿಗೆ ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ-ಕಾಂಗ್ರೆಸ್
ಬೆಂಗಳೂರು ಮಾ.13 : ಮಲ್ಲಿಕಾರ್ಜುನ್ ಯಾನೆ ಫೈಟರ್ ರವಿಯೊಂದಿಗೆ ಕೈಮುಗಿದು ನಿಂತ ನರೇಂದ್ರ ಮೋದಿ ಅವರ ಫೋಟೋ ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಕಾಂಗ್ರೆಸ್ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ `ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು’ ಎಂದು ಕಿಡಿ ಕಾರಿದೆ.
ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡ ಬಿಜೆಪಿ ನಾಯಕರ ನಿಯೋಗದಲ್ಲಿ ಫೈಟರ್ ರವಿ ಎಂಬುವವರು ಇದ್ದರು ಎನ್ನಲಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು ಟೀಕಿಸಿದೆ.
ಕಳೆದೆರಡು ವರ್ಷಗಳಿಂದ ಮಂಡ್ಯದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಮಲ್ಲಿಕಾರ್ಜುನ್ ಅಲಿಯಾಸ್ ಫೈಟರ್ ರವಿ ಎಂಬುವವರು 2022ರ ನವೆಂಬರ್ 28ರಂದು ಸಚಿವ ಅಶ್ವತ್ಥ ನಾರಾಯಣ, ನಾರಾಯಣಗೌಡ, ಗೋಪಾಲಯ್ಯ ಅವರ ಸಮ್ಮುಖದಲ್ಲಿ ಮಂಡ್ಯದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಸೌಲಭ್ಯ ಒದಗಿಸಿರುವ ಫೈಟರ್ ರವಿ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ.