ಮುನಿಯಪ್ಪಗೆ ಟಿಕೇಟ್ ನೀಡಲು ವಿರೋಧ: ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ರಾಜಿನಾಮೆ

ದೇವನಹಳ್ಳಿ ಮಾ.24 : ಒಂದೆಡೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ ಎಂಬ ವದಂತಿ ಹರಡಿದ್ದು, ಇದರ ಬೆನ್ನಲ್ಲೇ ಇದೀಗ ಟಿಕೆಟ್ ಆಕಾಂಕ್ಷಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ, ದೇವನಹಳ್ಳಿ ಹಾಗೂ ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ, ಗ್ರಾಮ ಪಂಚಾಯಿತಿಯ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪತ್ರ ಪ್ರದರ್ಶಿಸಿದ ಕಾಂಗ್ರೆಸ್ ಮುಖಂಡರು, ಐದು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಮಯ, ಹಣ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ್ದೇವೆ. ಕೊನೆ ಕ್ಷಣದಲ್ಲಿ ಕ್ಷೇತ್ರದ ಜನರಿಗೆ ಪರಿಚಯವಿಲ್ಲದ ವ್ಯಕ್ತಿಯನ್ನು ಕರೆ ತಂದು ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲಲಿದೆ’ ಎಂದು ಎಚ್ಚರಿಸಿದರು. ಹಾಗೂ 

‘ಸ್ಥಳೀಯರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಮುನಿಯಪ್ಪರಿಗೆ ಟಿಕೆಟ್ ನೀಡಿದ್ದಲ್ಲಿ ನಮ್ಮ ರಾಜೀನಾಮೆ ಅಂಗೀಕರಿಸಿ, ಹೊಸದಾಗಿ ಪದಾಧಿಕಾರಿಗಳನ್ನು ನೇಮಿಸಿಕೊಂಡು ಪಕ್ಷ ಸಂಘಟಿಸಿ’ ಎಂದು ಸವಾಲು ಹಾಕಿದರು.

ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದ ವ್ಯಕ್ತಿಗೆ ಟಿಕೆಟ್ ನೀಡಿದರೆ ಮುಳುವಾಗಲಿದೆ. ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಇದರ ಜೊತೆಗೆ ಕ್ಷೇತ್ರದಲ್ಲಿ ಬಿಜೆಪಿಯು ದಲಿತ ಎಡಗೈ ಸಮುದಾಯದ ವ್ಯಕ್ತಿಗೆ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್ ಕೂಡಾ ಅದೇ ಸಮುದಾಯದ ವ್ಯಕ್ತಿಗೆ ಟಿಕೆಟ್ ನೀಡದಿದ್ದರೆ ಮತಗಳು ವಿಭಜನೆ ಆಗಲಿವೆ ಎಂದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮತ್ತು ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!