ಮಹಾರಾಷ್ಟ್ರ: ದೇವೇಂದ್ರ ಫಡ್ನವಿಸ್ ಮನೆಗೆ ಬಾಂಬ್ ಬೆದರಿಕೆ ಕರೆ- ವ್ಯಕ್ತಿ ಸೆರೆ
ಮುಂಬೈ ಮಾ.28 : ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಾಗುರದ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ನಾಗುರದ ಕನ್ಹಾನ್ ಪಟ್ಟಣದಿಂದ 30 ಕಿಮೀ ದೂರದ ಗ್ರಾಮವೊಂದರಲ್ಲಿ 30 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.
ತಮ್ಮ ಗ್ರಾಮದಲ್ಲಿ ವಿದ್ಯುತ್ ಕಡಿತ ಮಾಡಲಾಗಿತ್ತು. ಇದರಿಂದ ಆಕ್ರೋಶಗೊಂಡು ಬಾಂಬ್ ಇಟ್ಟಿರುವುದಾಗಿ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂಬುದಾಗಿ ಪೊಲೀಸರು ಹೇಳಿದ್ದಾರೆ.
ತಡರಾತ್ರಿ 2 ಗಂಟೆ ಸುಮಾರಿಗೆ ನಾಗ್ಪುರದ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಆರೋಪಿ, ದೇವೇಂದ್ರ ಫಡಣವೀಸ್ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದು, ಥಟ್ಟನೆ ಕರೆಯನ್ನು ಸ್ಥಗಿತಗೊಳಿಸಿದ್ದ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಒಳಗೊಂಡ ಪೊಲೀಸರ ತಂಡ ಕೂಡಲೇ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿತ್ತು. ಆದರೆ ಸ್ಥಳದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.