ಸಾಮಾಜಿಕ ಜಾಲಾತಾಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವೈರಲ್: ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?
ಬೆಂಗಳೂರು ಎ.4 : ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ ಎನ್ನಲಾದ ಪಟ್ಟಿ ನಕಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು ನಕಲಿ ಆಗಿರುತ್ತದೆ” ಎಂದು ತಿಳಿಸಿದ್ದಾರೆ.
ಹಾಗೂ “ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ” ಎಂದು ದೂರಿದ್ದಾರೆ.
ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯಿಂದ ಕರ್ನಾಟಕ ಚುನಾವಣೆಗೆ 100 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ ಹಾಗೂ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ಗುಜರಾತ್ ಮಾದರಿ ಪಾಲಿಸಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಕಾರ್ಕಳ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್, ಮಂಗಳೂರು ಉತ್ತರ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಕಣಕ್ಕಿಳಿಯಲಿದ್ದಾರೆ ಎಂದು ಸೂಚಿಸಲಾಗಿದೆ.