ಬೆಂಗಳೂರು: ಮೇ 8 ರಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ
ಬೆಂಗಳೂರು ಮೇ.7 : ಮೇ 8 ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಕಾರಣ ಮೇ 8ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, 9ರಂದು ಮೈಸೂರು, ಚಾಮರಾಜನಗರ, 10ರಂದು ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ರಾಯಚೂರು, ಗದಗ, ಬೀದರ್, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲೂ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಭಾನುವಾರ ಸಹ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.