ಬಿಜೆಪಿಯಿಂದ ನಕಲಿ ಪತ್ರ ರಚಿಸಿ ಅಪಪ್ರಚಾರ- ಸಿದ್ದರಾಮಯ್ಯ
ಬೆಂಗಳೂರು ಮೇ 9 : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿ ಸ್ಪಷ್ಟಣೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು ಎಂದು ತಿಳಿಸಿದ್ದಾರೆ.
ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿಯು ನನ್ನ ಹೆಸರಿನ ನಕಲಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹಾಗೂ ನನ್ನ ಮತ್ತು ಡಿ.ಕೆ. ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಿದ್ದೇನೆ ಎಂದು ಅವರು ಹೇಳಿದರು.