ನಾಳೆ ಪ್ರಮಾಣ ವಚನ-ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಿ – ಡಿಕೆಶಿ
ಬೆಂಗಳೂರು ಮೇ 19 : ಪ್ರಮಾಣ ವಚನ ಸ್ವೀಕಾರ ಸಮಾರಂಭ ಇರುವ ಕಾರಣ ನಾಳೆ ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ವಿಚಾರವಾಗಿ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಇದರ ಜೊತೆಗೆ ವಿದ್ಯಾರ್ಥಿಗಳಲ್ಲಿ ನಾಳೆ ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ. ಹಾಗೂ ಯಾವುದೇ ಸಹಾಯ ಬೇಕಿದ್ದರೂ ಪೊಲೀಸರನ್ನು ಸಂಪರ್ಕಿಸಿ ಎಂದು ಸೂಚನೆ ನೀಡಿದ್ದಾರೆ.
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಮೇ 20, 21ರಂದು ಬೆಂಗಳೂರು ಸೇರಿದಂತೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಶನಿವಾರ ಮಧ್ಯಾಹ್ನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ. ಇದರಿಂದ ಸಿಇಟಿ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಹುದು ಎಂಬ ಆತಂಕ ಎದುರಾಗಿತ್ತು. ಆದ್ದರಿಂದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ವಾಹನ ದಟ್ಟಣೆಯಿಂದ ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗದಿರಬಹುದು. ಹಾಗಾಗಿ, ಸಿಇಟಿಗೆ ಹಾಜರಾಗುವವರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಹಲವು ಅಭ್ಯರ್ಥಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.