ಬೆಂಗಳೂರು: ಬಿಪಿಎಲ್ ಪಡಿತರ ಚೀಟಿಗೆ ಜೂ.1 ರಿಂದ ಅರ್ಜಿ ಆಹ್ವಾನ
ಬೆಂಗಳೂರು ಮೇ 27: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಹರು ಜೂ.1 ರಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಜಿ. ಗ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರು, ‘ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಈ ಹಿಂದೆಯೇ ಮಂಜೂರಾದ ಪಡಿತರ ಚೀಟಿಗಳ ವಿತರಣೆ ಪ್ರಗತಿಯಲ್ಲಿದೆ. ಆದ್ದರಿಂದ ಜೂನ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಲಾಗುವುದು’ ಎಂದು ಹೇಳಿದ್ದಾರೆ.
ಹಾಗೂ 2021ರ ನವೆಂಬರ್‌ನಲ್ಲಿ 2.76 ಲಕ್ಷ ಹೊಸ ಬಿಪಿಎಲ್ ಪಡಿತರ ಚೀಟಿಗಳ ವಿತರಣೆಗೆ ಸರ್ಕಾರ ಮಂಜೂರಾತಿ ನೀಡಿತ್ತು. 2022 ರ ನವೆಂಬರ್‌ನಲ್ಲಿ 1.55 ಲಕ್ಷ ಪಡಿತರ ಚೀಟಿಗಳ ವಿತರಣೆಗೆ ಮಂಜೂರಾತಿ ನೀಡಲಾಗಿತ್ತು. ಈಗ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆಯನ್ನು ಆಧರಿಸಿ ಹೊಸ ಪಡಿತರ ಚೀಟಿಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಚುನಾವಣಾ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ಸ್ಥಗಿತಗೊಳಿ- ಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ನಿಗದಿಪಡಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಜನರು ಬಿಪಿಎಲ್ ಪಡಿತರ ಚೀಟಿಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ.
ರಾಜ್ಯದಲ್ಲಿ ಈಗ 1.3 ಕೋಟಿ ಬಿಪಿಎಲ್ ಪಡಿತರ ಚೀಟಿಗಳಿವೆ. ಸುಮಾರು 4.30 ಕೋಟಿ ಜನರು ಪಡಿತರ ಚೀಟಿಗಳ ವ್ಯಾಪ್ತಿಯಲ್ಲಿದ್ದಾರೆ. ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ಹತ್ತು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ‘ಗ್ಯಾರಂಟಿ’ ರೂಪದ ಭರವಸೆ ನೀಡಿತ್ತು. ಇದರಿಂದಾಗಿ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳಿಗೆ ಬೇಡಿಕೆ ಹೆಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ.