ಯಡಿಯೂರಪ್ಪ ರಾಜಿನಾಮೆ ನೀಡಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ: ಈಶ್ವರಪ್ಪ

ಶಿವಮೊಗ್ಗ: ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜಿನಾಮೆ ನೀಡಿದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿಎಂ ಬಿಎಸ್‍ವೈ ಹಾಗೂ ಈಶ್ವರಪ್ಪ ನಡುವಿನ ವೈಮನಸ್ಸಿಗೆ ಸಂಬಂದಿಸಿ ಕಾಂಗ್ರೆಸ್ ನ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವ ಅವಸರದಲ್ಲಿ ಇದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಅವರನ್ನು ಜನ ತಿರಸ್ಕರಿಸಿದ್ದಾರೆ.

ಇದೀಗ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾನು ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ಯಾವ ಕಾರಣಕ್ಕೂ ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳುವುದು ಬೇಡ ಎಂದು ಟೀಕಿಸಿದರು.

ಈ ಬಗ್ಗೆ ಮಾತು ಮುಂದುವರೆಸಿದ ಅವರು, ಉಪಚುನಾವಣೆ ನಡೆಯುವ ಕ್ಷೇತ್ರಗಳ ಮನೆಗಳಿಗೂ ತೆರಳಿ ಮತದಾರರ ಮನವೊಲಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ.  ಹಾಗಾಗಿ ನಾನು ಬರೆದ ಪತ್ರ ಉಪಚುನಾವಣೆಯಲ್ಲಿ ವಿಪಕ್ಷಗಳಿಗೆ ಅಸ್ತ್ರವಾಗುವುದಿಲ್ಲ. ವಿಪಕ್ಷಗಳಿಗೆ ಅರೋಪ ಮಾಡಲು ಬೇರೆ ವಿಷಯ ಸಿಗುತ್ತಿಲ್ಲ ಹೀಗಾಗಿ ನಾನು ಬರೆದ ಪತ್ರವನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದರು.

ಇದೇ ವೇಳೆ ನಮ್ಮಲ್ಲಿರುವ ಆಡಳಿತಾತ್ಮಕ ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ಳುತ್ತಿದ್ದೇವೆ ಎಂದ ಅವರು, ವಿಪಕ್ಷಗಳಿಗೆ ಈ ವಿಷಯದಲ್ಲಿ ಹುಳುಕು ಸಿಗುವುದಿಲ್ಲ, ಬೆಳಕೂ ಸಿಗುವುದಿಲ್ಲ. ನಮ್ಮ ಸಮಸ್ಯೆಗಳನ್ನು ಕೆಲವೇ ದಿನದಲ್ಲಿ ಪರಿಹರಿಸುವ ಭರವಸೆಯನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೀಡಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

Leave a Reply

Your email address will not be published. Required fields are marked *

error: Content is protected !!