10 ಹೆಚ್.ಪಿ ವರೆಗೆ ನೇಕಾರರಿಗೆ ಉಚಿತ ವಿದ್ಯುತ್: ಸದ್ಯದಲ್ಲೇ ತೀರ್ಮಾನ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. 25: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ  ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತ ಬೇಡಿಕೆ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ  ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ  ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ನಡೆದ  ಸಭೆಯಲ್ಲಿ ಅವರು 10 ಹೆಚ್.ಪಿ ವರೆಗೂ ಉಚಿತ ವಿದ್ಯುತ್ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಹಾಗೂ 10 ಹೆಚ್ ಪಿ ಗಿಂತ ಹೆಚ್ಚಿನ ವಿದ್ಯುತ್ ಬಳಸುವ ಮಗ್ಗಗಳ ಬಗ್ಗೆಯೂ ಚರ್ಚಿಸಿದರು. 

ಬಳಿಕ  ಮಾತನಾಡಿದ ಅವರು, ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಹಾಗೂ ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದೆ. ಇದರಿಂದ ಸಣ್ಣ ನೇಕಾರರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ,ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ  ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!