ತಾರತಮ್ಯ ತೋರದೆ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಏ 24 ( ಉಡುಪಿ ಟೈಮ್ಸ್ ವರದಿ): ತಾರತಮ್ಯ ತೋರದೆ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಲಸಿಕೆ ವಿತರಣೆ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, “ಈಗಾಗಲೇ ಜಾಖರ್ಂಡ್, ಗೋವಾ, ಛತ್ತೀಸ್ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ.ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ನನ್ನ ಕೋರಿಕೆ. ಮೇ ತಿಂಗಳ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರೂವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮನವಿ ಮಾಡುತ್ತೇನೆ”.
“ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ನನ್ನ ಆಗ್ರಹವಾಗಿದೆ. ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ರೂ2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ರೂ 2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ” ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.