ಲೋಕಸಭಾ ಚುನಾವಣೆ: ದ.ಕ ಲೋಕಸಭಾ ಕ್ಷೇತ್ರದಿಂದ ನಿರ್ಮಲಾ ಸೀತಾರಾಮನ್ ಕಣಕ್ಕೆ?
ನವದೆಹಲಿ : ಮುಂಬರುವ 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಪಕ್ಷದಲ್ಲಿ ಹೆಚ್ಚಳವಾಗುತ್ತಿರುವ ಭಿನ್ನಮತ ಮತ್ತು ಬಂಡಾಯದ ಕೂಗು ಎದ್ದಿರುವುದನ್ನು ಶಮನ ಮಾಡಲು ಬಿಜೆಪಿ ಹೈಕಮಾಂಡ್ ಹೊಸ ತಂತ್ರವನ್ನು ರೂಪಿಸಿದೆ ಎನ್ನಲಾಗುತ್ತಿದೆ.
ತನ್ನ ಭದ್ರಕೋಟೆ ಉಳಿಸಿಕೊಳ್ಳು ಬಗ್ಗೆ ಚಿಂತೆ ಮಾಡಿರುವ ಬಿಜೆಪಿ ಹೈಕಮಾಂಡ್, ದಕ್ಷಿಣ ಕನ್ನಡ ಬಿಜೆಪಿಯೊಳಗಿನ ಭಿನ್ನಮತ ಶಮನ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.
ಒಂದೆಡೆ ನಳೀನ್ ಕುಮಾರ್ ಅವರಿಗೆ ಮತ್ತೊಮ್ಮೆ ಸಂಸತ್ ಟಿಕೆಟ್ ಕೊಡಬೇಡಿ ಎಂಬ ಆಗ್ರಹ ಬಲವಾಗಿ ಕೇಳಿಬರುತ್ತಿದ್ದರೆ ಮತ್ತೊಂದೆಡೆ ಕಟೀಲ್ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಟ್ಟರೆ ಸತ್ಯಜಿತ್ ಸುರತ್ಕಲ್ ಮತ್ತು ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿದೆ. ಇಷ್ಟು ಮಾತ್ರವಲ್ಲದೆ ಇನ್ನೊಂದೆಡೆ ಇತರೆ ಆಕಾಂಕ್ಷಿಗಳು ಕೂಡ ಬಿಜೆಪಿ ಟಿಕೆಟ್ಗಾಗಿ ಲಾಬಿ ಆರಂಭಿಸಿದ್ದಾರೆ. ಹೀಗಾಗಿ ಅಭ್ಯರ್ಥಿ ಆಯ್ಕೆಯಲ್ಲಿ ಸ್ವಲ್ಪ ಏರುಪೇರಾದರೂ ಒಳಯೇಟುಗಳಿಂದ ಕ್ಷೇತ್ರವೇ ಕೈತಪ್ಪುವ ಆತಂಕ ಬಿಜೆಪಿಗೆ ಎದುರಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಕ್ಷೇತ್ರಕ್ಕೆ ಕರೆತಂದರೆ ಪಕ್ಷದೊಳಗಿನ ಭಿನ್ನಮತ ಮತ್ತು ಬಂಡಾಯವನ್ನು ದೂರ ಮಾಡಬಹುದು ಎಂಬ ಯೋಚನೆ ಮಾಡಿರುವ ಬಿಜೆಪಿ ಹೈಕಮಾಂಡ್, ದಕ್ಷಿಣ ಕನ್ನಡ ಲೋಕಸಭೆಯ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಅವರನ್ನು ಆಯ್ಕೆ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ.