ಕೊಪ್ಪಳ : ದಲಿತ ದೌರ್ಜನ್ಯ ಪ್ರಕರಣ- 101 ಮಂದಿ ಅಪರಾಧಿಗಳಿಗೆ ಶಿಕ್ಷೆ
ಕೊಪ್ಪಳ ಅ.24 : ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ 2015ರಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ 101 ಮಂದಿಗೆ ಶಿಕ್ಷೆ ಪ್ರಕಟಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ 101 ಮಂದಿ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ, 5 ಸಾವಿರ ದಂಡ ವಿಧಿಸಿದೆ. ಇನ್ನೂ ಮೂವರು ಅಪರಾಧಿಗಳು ಕೂಡಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರಿಂದ ಜಾತಿ ನಿಂದನೆ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಈ ಮೂವರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಲಾಗಿದೆ.
ಪ್ರಕರಣ ನಡೆದು 9 ವರ್ಷದ ಬಳಿಕ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶದಾದ ಸಿ.ಚಂದ್ರಶೇಖರ್ ಅವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ
2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಕ್ಷೌರ ದಂಗಡಿ ಮತ್ತು ಹೋಟೆಲ್ಗಳಲ್ಲಿ ದಲಿತರಿಗೆ ಪ್ರವೇಶಿಸಲು ನಿರಾಕರಣೆಯ ಕುರಿತು ಜಗಳವಾಗಿತ್ತು. ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ಈ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.
ಈ ಘಟಣೆಗೆ ಸಂಬಂಧಿಸಿದಂತೆ ಗ್ರಾಮದ 117 ಜನರ ವಿರುದ್ಧ ಪ್ರಕರಣ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಕೆಲ ಆರೋಪಿಗಳು ಈಗಾಗಲೇ ಮೃತಪಟ್ಟಿದ್ದಾರೆ. ಇದರಲ್ಲಿ 101 ಜನರ ವಿರುದ್ಧ ಆರೋಪ ಸಾಬಿತಾಗಿದ್ದು, ಅದರಲ್ಲಿ ವಿಚಾರಣೆಗೆ ಹಾಜರಾಗಿದ್ದ 100 ಜನರನ್ನು ಬಂಧಿಸಿದ್ದರು. ಇನ್ನೊಬ್ಬ ವಿಚಾರಣೆಗೆ ಹಾಜರಾಗಿರಲ್ಲಿಲ್ಲ. ಆದ್ದರಿಂದ ಆತನ ಬಂಧನ ಆಗಿಲ್ಲರಲಿಲ್ಲ, ಆದರೆ ಆತನನ್ನು ಬಳಿಕ ಪೊಲೀಸರು ಬಂಧಿಸಿದ್ದಾರೆ.