ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ: ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ!
ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ. ನಂದಿನಿಯ ಬಹುತೇಕ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುತ್ತಿದೆ. ಇದೀಗ ಪ್ರೋಟೀನ್ me ಯುಕ್ತ ದೋಸೆ ಹಿಟ್ಟು ಮತ್ತು ಇಡ್ಲಿ ಹಿಟ್ಟನ್ನು ಕೂಡ ಮಾರುಕಟ್ಟೆಗೆ ಪರಿಚಯಿಸಿದೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ರೆಡಿ ಟು ಕುಕ್ ನಂದಿನಿ ವೇ ಪ್ರೋಟೀನ್ ಆಧಾರಿಕ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.
ಕೆಎಂಎಫ್ ಬಿಡುಗಡೆ ಮಾಡಿರುವ ಈ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5ರಷ್ಟು ಪ್ರೋಟೀನ್ ಅಂಶವನ್ನು ಸೇರಿಸಲಾಗಿದೆ. ಸದ್ಯ ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ಮಾರಾಟ ಮಾಡಲು ನಿರ್ಧರಿಸ ಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣ ವಾಗಿ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.
ದೋಸೆ ಹಾಗೂ ಇಡ್ಲಿ ಹಿಟ್ಟಿನ 450 ಗ್ರಾಂ ತೂಕದ ಪೊಟ್ಟಣಕ್ಕೆ 40 ರೂ. ಮತ್ತು 900 ಗ್ರಾಂ ತೂಕದ ಪೊಟ್ಟಣಕ್ಕೆ 80 ರೂ. ಮಾರಾಟ ದರವನ್ನು ನಿಗದಿ ಮಾಡಲಾಗಿದೆ.
ಕನ್ನಡಿಗರ ಹೆಮ್ಮೆ ನಂದಿನಿ
ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸ ಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ಬೆಳಗ್ಗಿನ ಉಪಾಹಾರವು ಗರಿಗರಿ ದೋಸೆ, ಸವಿಸವಿ ಇಡ್ಲಿಯೊಂದಿಗೆ ರುಚಿ ಮತ್ತು ಆರೋಗ್ಯವನ್ನು ವೃದ್ಧಿಗೊಳಿಸಲಿದೆ ಎಂದಿದ್ದಾರೆ.