ಜನರ ಬಳಿಯೇ ಅಹವಾಲು ಆಲಿಸಿ ಸ್ಥಳದಲ್ಲೇ ಪರಿಹಾರ: ರಿಜ್ವಾನ್ ಅರ್ಷದ್

ಉಡುಪಿ, ಸೆ.9: ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಂಗಳವಾರ ನಡೆದ ಉಡುಪಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಹಾಗೂ ಜನರ ನಡುವಿನ ಸಂಬಂಧ ಸದಾ ಗಟ್ಟಿಯಾಗಿರಬೇಕು. ಸರ್ಕಾರಿ ಸೇವೆ ಪಡೆಯಲು ಜನರು ಕಚೇರಿಗಳಿಗೆ ವಾರಗಟ್ಟಲೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸುವ ಉದ್ದೇಶದಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು, ಅವುಗಳ ಆಧಾರದ ಮೇಲೆ ಅಗತ್ಯ ನೀತಿ ಹಾಗೂ ಯೋಜನೆ ರೂಪಿಸುವುದು ಸರ್ಕಾರದ ಕರ್ತವ್ಯ. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಮತ್ತು ಎರಡನೇ ಹಾಗೂ ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಿದ್ದಾರೆ. ಪ್ರತಿ ಬುಧವಾರ ಜಿಲ್ಲಾಧಿಕಾರಿಗಳು ಹಿರಿಯ ಅಧಿಕಾರಿಗಳೊಂದಿಗೆ ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಪ್ರತಿ ಅರ್ಜಿಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸಂಬಂಧಪಟ್ಟ ಇಲಾಖೆಗೆ ಅರ್ಜಿ ರವಾನಿಸುವುದಷ್ಟೇ ಅಲ್ಲದೆ, ಅದರ ಮೇಲಿನ ಕ್ರಮವನ್ನು ಫಾಲೋಆಪ್ ಮಾಡಿ, ಕೈಗೊಂಡ ಪರಿಹಾರದ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡಲಾಗುವುದು ಎಂದರು.

ಉಡುಪಿ ಪ್ರಜ್ಞಾವಂತರ ಜಿಲ್ಲೆಯಾಗಿದ್ದು, ಇಲ್ಲಿ ಪ್ರಜಾಸೇವಾ ಆಂದೋಲನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಸಂತಸದ ವಿಚಾರ. ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದ್ದು, ಪ್ರವಾಸೋದ್ಯಮ, ವ್ಯಾಪಾರ-ವ್ಯವಹಾರ, ಉದ್ಯೋಗಾವಕಾಶ ಸೇರಿದಂತೆ ಕರಾವಳಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.

208 ಅರ್ಜಿಗಳ ಸ್ವೀಕಾರ

ಸಭೆಯಲ್ಲಿ ಖಾತೆ ಪೋಡಿ, ದರಖಾಸ್ತು ಜಮೀನು, ಜಮೀನುಗಳಿಗೆ ಕಾಲುದಾರಿ, ಮನೆ ಹಾಗೂ ನಿವೇಶನ, ಚರಂಡಿ ವ್ಯವಸ್ಥೆ, ಕೆರೆಗಳ ಅಭಿವೃದ್ಧಿ, ಗೃಹಜ್ಯೋತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮೂಲಕ 208 ಅರ್ಜಿಗಳು ಸಲ್ಲಿಕೆಯಾದವು.

ಸಚಿವ ರಿಜ್ವಾನ್ ಅರ್ಷದ್ ಅವರು ಸಾರ್ವಜನಿಕರ ಅಹವಾಲುಗಳನ್ನು ಶಾಂತವಾಗಿ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡು ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದ್ದು, ಸರ್ಕಾರದ ಯೋಜನೆಗಳನ್ನು ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಮನೆ ಬಾಗಿಲಿಗೂ ತಲುಪಿಸುವ ಪ್ರಯತ್ನ ಇದಾಗಿದೆ. ಸಾರ್ವಜನಿಕರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ನೀಡಲು ಹಾಗೂ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇದು ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿಎಫ್‌ಒ ರುಥೇನ್ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸ್ವಾಗತಿಸಿದರು. ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ವಿವಿಧ ಇಲಾಖೆಗಳ ಮಾಹಿತಿ ಮಳಿಗೆ

ಸಭಾಂಗಣದ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿವಿಧ ಅಭಿವೃದ್ಧಿ ನಿಗಮಗಳು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ–ಸಂಜೀವಿನಿ, ಕೃಷಿ, ತೋಟಗಾರಿಕೆ, ಆಯುಷ್, ಪಶುಪಾಲನೆ, ಕಾರ್ಮಿಕ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳನ್ನು ತೆರೆಯಲಾಗಿತ್ತು.

ಸರ್ಕಾರದ ವಿವಿಧ ಯೋಜನೆಗಳು, ಸಾಲ ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಸಂಜೀವಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನೂ ತೆರೆಯಲಾಗಿತ್ತು. ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!