ಸಾರ್ವಜನಿಕರು ಮೋಸ ಹೋಗಬಾರದೆಂದು ದೂರು ನೀಡಿದ್ದೇನೆ: ಬಿ.ವೈ ವಿಜಯೇಂದ್ರ
ಬೆಂಗಳೂರು ಜು.2: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ವಂಚಿಸಿರುವ ಆರೋಪದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಭಾರಿಗೆ ಬಿ.ವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ.
ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ.
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.