ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ

ಬೆಂಗಳೂರು(ಉಡುಪಿ ಟೈಮ್ಸ್ ವರದಿ): ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಡಿಸೆಂಬರ್ ತಿಂಗಳಿನಲ್ಲೂ ಶಾಲೆ ಆರಂಭ ಇಲ್ಲ ಇದರೊಂದಿಗೆ ಈ ವರ್ಷ ಶಾಲೆ ಆರಂಭ ಇರುವುದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಭಾನುವಾರ (ನ. 22)ದಂದು ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಆದರೆ ದೆಹಲಿ, ಹರ್ಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ. ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಡಾ.ಎಂ.ಕೆ. ಸುದರ್ಶನ್ ತಿಳಿಸಿದರು .

ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲ, ಡಿಸೆಂಬರ್ ಅಂತ್ಯಕ್ಕೆ ತಜ್ಞರೊಂದಿಗೆ ಸಭೆಯನ್ನ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದರೊಂದಿಗೆ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.

Leave a Reply

Your email address will not be published. Required fields are marked *

error: Content is protected !!