ಮಾಜಿ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೆ ಸಿಎಂ ಬಿ.ಎಸ್.ವೈ ಮಹತ್ವದ ಆದೇಶ!


ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದ್ದರೂ ಸರಕಾರ ಅನಗತ್ಯವಾಗಿ ನಿಗಮ ಮಂಡಳಿಗಳನ್ನು ನೇಮಕ ಮಾಡಿ ಆರ್ಥಿಕ ಸ್ಥಿತಿ ಹಾಳು ಹಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹತ್ವದ ಅದೇಶವೊಂದನ್ನು ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒಂದರ ಮೇಲೊಂದರಂತೆ ದಿಢೀರ್ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ನಿಗಮ ಮಂಡಳಿಗಳಿಗೆ ನೇಮಕ ಮಾಡಿದ ಬೆನ್ನಲ್ಲಿಯೆ ವಿರೋಧ ಪಕ್ಷಗಳಿಂದ ಆರೋಪ ಎದುರಾಗಿತ್ತು.

ಇದೀಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರ್ಥಿಕ ಇಲಾಖೆಗೆ ಮಹತ್ವದ ಸೂಚನೆ ನೀಡಿದ್ದು, ಅದರಂತೆ 2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.


ಈ ಕುರಿತು ಆರ್ಥಿಕ ಇಲಾಖೆ ಕಾರ್ಯದರ್ಶಿ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದು, ಯಾವುದೇ ಇಲಾಖೆ 2020-21 ನೇ ಸಾಲಿನಲ್ಲಿ ನವೆಂಬರ್ ತಿಂಗಳಿನಿಂದ ಫೆಬ್ರವರಿವರೆಗೂ ವೇತನ, ಭತ್ಯೆ, ಪಿಂಚಣಿ ಸೇರಿದಂತೆ ಅನುದಾನ ಬಿಡುಗಡೆ ಮಾಡಲು ಇಲಾಖಾ ಮುಖ್ಯಸ್ಥರಿಗೆ ಅಧಿಕಾರ ನೀಡಿ ಆದೇಶಿಸಿದ್ದಾರೆ. ವಿವಿಧ ಇಲಾಖೆಗಳ ಮುಖಸ್ಥರು ತಮ್ಮ ವ್ಯಾಪ್ತಿಯಲ್ಲಿ 10 ಕೋಟಿ ವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದೆ, ಆದರೆ, ಹಣ ಖರ್ಚು ಮಾಡಿರುವ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಜೊತೆಗೆ, ಕೋವಿಡ್-19 ಪರಿಣಾಮದಿಂದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಬಿಡುಗಡೆಯ ಕುರಿತು ಇಲಾಖೆಗಳಿಗೆ ನೀಡಿರುವ ಸೂಚನೆ ಮುಂದುವರೆಯಲಿದ್ದು, 10 ಕೋಟಿವರೆಗಿನ ಚಾಲ್ತಿಯಲ್ಲಿರುವ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಹಾಗೆ ಮಾಡಬೇಕೆಂದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಸೂಚಿಸಲಾಗಿದೆ.
ಯಾವುದೇ ಇಲಾಖೆ 10 ಕೋಟಿಗಿಂತ ಹೆಚ್ಚಿನ ಮೊತ್ತದ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಮೊದಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅಲ್ಲದೇ ಈಗಾಗಲೇ ಏಪ್ರೀಲ್‌ನಿಂದ ಅಕ್ಟೋಬರ್ ತಿಂಗಳಿನವರೆಗೆ ಬಿಡುಗಡೆ ಮಾಡಿರುವ ಹಣದಲ್ಲಿ ಶೇಕಡಾ 75 ರಷ್ಟು ಖರ್ಚು ಮಾಡಿರುವುದನ್ನು ಖಾತ್ರಿ ಮಾಡಿಕೊಂಡು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ಸಲ್ಲಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

error: Content is protected !!