ನಾನ್ ಸಿಆರ್ ಝಡ್’ನಲ್ಲಿ ಮರಳು ತೆಗೆಯಲು ಅವಕಾಶಕ್ಕೆ ಸಚಿವರಿಗೆ ರಘುಪತಿ ಭಟ್ ಒತ್ತಾಯ

ಬೆಂಗಳೂರು ಮಾ.23 (ಉಡುಪಿ ಟೈಮ್ಸ್ ವರದಿ): ಕರಾವಳಿಯ ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಹಾಗೂ ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಇರುವ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಸುಗಮ ಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಸಭೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಭಾಗದಲ್ಲಿ ಮರಳು ತೆಗೆಯುವಲ್ಲಿ ಇರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಇದೇ ವೇಳೆ ಉಡುಪಿ ಶಾಸಕ ರಘುಪತಿ ಭಟ್ ಅವರು, ಕರ್ನಾಟಕದ ಕರಾವಳಿ ಭಾಗದ ನಾನ್ crz ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಅವರು ಕೇಳಿಕೊಂಡರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು, ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಹಾಗೂ ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ರಾಮಮನೋಹರ ಪ್ರಸನ್ನ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!