ಉಡುಪಿ: ರಾಜ್ಯಾದ್ಯಂತ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ
ಉಡುಪಿ ಮಾ.28 (ಉಡುಪಿ ಟೈಮ್ಸ್ ವರದಿ): ರಾಜ್ಯಾದ್ಯಂತ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭಗೊಂಡಿದೆ. ಉಡುಪಿ ಜಿಲ್ಲೆಯಲ್ಲಿಯೂ ಮುಂಜಾನೆಯೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯುತ್ತಿದ್ದಾರೆ.
ಇಂದು ಪ್ರಥಮವಾಗಿ ಕನ್ನಡ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ಜೊತೆ ಗನ್ ಮ್ಯಾನ್ ನೊಂದಿಗೆ ವಿಶೇಷ ಭದ್ರತೆಯಲ್ಲಿ ಅಧಿಕಾರಿಗಳು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿ ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರ ಮಾಡಿದ್ದಾರೆ.
ಜಿಲ್ಲೆಯಲ್ಲಿ 7229 ಬಾಲಕರು ಹಾಗೂ 6793 ಬಾಲಕಿಯರು ಸೇರಿ ಒಟ್ಟು 14022 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಹಾಗೂ ಸಾವಿರದ ಇನ್ನೂರಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಹಿಜಾಬ್ ವಿವಾದದ ಕುರಿತ ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಹಿಜಬ್ ಗೆ ಅವಕಾಶ ನಿರಾಕರಿಸಲಾಗಿದೆ, ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬುರ್ಕಾ ಮತ್ತು ಹಿಜಾಬ್ ತೆಗೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಈ ನಡುವೆ ಧರ್ಮಗುರುಗಳು, ಮುಸ್ಲಲ್ಮಾನ ಪ್ರಮುಖರು ಶಿಕ್ಷಣ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಿ ಎಂದು ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದ್ದು, ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೆ ಶಾಲೆಗೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಗೊಂದಲಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಲು ಇಲಾಖೆ ತಯಾರಿ ನಡೆಸಿದ್ದು, ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಲೇರಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಂದಂತೆ ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಇನ್ನು ಪರೀಕ್ಷಾ ಕೇಂದ್ರಕ್ಕೆ ಪೋಷಕರಿಗೆ ಅನುಮತಿ ನೀಡಿಲ್ಲ ಆದರೆ ಕೆಲವು ಕಡೆಗಳಲ್ಲಿ ಪೊಷಕರು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರುತ್ತಿರುವ ದೃಶ್ಯಕೂಡಾ ಕಂಡು ಬಂದಿದೆ.