ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಗಣ್ಯರು
ಬೆಂಗಳೂರು ಮಾ. 28: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಅನೇಕ ನಾಯಕರು ಶುಭಕೋರಿದ್ದಾರೆ.
ವಿದ್ಯಾರ್ಥಿಗಳಿಗೆ ಶುಭ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಭಾಶಯ ಕೋರಿದ್ದು, ಎಲ್ಲಾ ವಿದ್ಯಾರ್ಥಿಗಳು ಧೈರ್ಯ ವಾಗಿ ಪರೀಕ್ಷೆ ಬರೆಯಿರಿ ಎಂದು ಹಾರೈಸಿದ್ದಾರೆ.
ಹಾಗೂ ರಾಜ್ಯದ ಶೇ.99.9ರಷ್ಟು ಶಾಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆಂಬ ವಿಶ್ವಾಸವಿದೆ. ಯಾವುದೇ ಹಿಜಾಬ್ ವಿವಾದವಾಗಲ್ಲವೆಂಬ ವಿಶ್ವಾಸವಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚು ಭದ್ರತೆ ಮಾಡಲಾಗಿದೆ. ಶಿಕ್ಷಣ ಬೇಕು ಎನ್ನುವವರು ಬಂದು ಪರೀಕ್ಷೆ ಬರೆಯಬೇಕು. ಪರೀಕ್ಷೆ ಬರೆಯುವವರಿಗೆ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡುತ್ತದೆ. ಧರ್ಮವೇ ಮುಖ್ಯ ಅನ್ನೋರಿಗೆ ಏನು ಮಾಡುವುದಕ್ಕೆ ಆಗುತ್ತೆ ಎಂದು ಹೇಳಿದ್ದಾರೆ.
ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ಶುಭ ಹಾರೈಕೆಗಳು. ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ ಎಂದು ಶುಭ ಹಾರೈಸಿದ್ದಾರೆ.