ವಿರಾಜಪೇಟೆ ತಾ.ಪಂ ಸಾಮಾನ್ಯ ಸಭೆ : ಅಧಿಕಾರಿಗಳ ವಿರುದ್ಧ ಸದಸ್ಯರ ಅಸಮಾಧಾನ
ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನದ ಮೊತ್ತ ಸರ್ಕಾರಕ್ಕೆ ವಾಪಸ್ ಹೋಗಿರುವುದಕ್ಕೆ ವೀರಾಜಪೇಟೆ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪೊನ್ನಂಪೇಟೆ ಸಾಮರ್ಥ್ಯಸೌಧದಲ್ಲಿ ವೀರಾಜಪೇಟೆ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ವೀರಾಜಪೇಟೆ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರುಗಳು ಅಧಿಕಾರಿಯ ನಿರ್ಲಕ್ಷ್ಯವನ್ನು ಖಂಡಿಸಿದರು.
ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದ್ದರೂ ವಿವಿಧ ಕಾಮಗಾರಿಗಳ ರೂ. 2.4 ಲಕ್ಷ ಅನುದಾನ ಸರ್ಕಾರಕ್ಕೆ ವಾಪಸ್ ಹೋಗಿರುವುದರಿಂದ ಮೊದಲು ಹಣ ಖರ್ಚು ಮಾಡಿದ ಗುತ್ತಿಗೆದಾರರ ಆರ್ಥಿಕ ಸ್ಥಿತಿಗೆ ತೊಡಕಾಗಿದೆ. ಅನುದಾನ ಕೂಡ ಇಲಾಖೆ ನಿರ್ಲಕ್ಷ್ಯದಿಂದ ವಾಪಸ್ ಹೋಗಿರುವುದು ಅಧಿಕಾರಿಗಳ ಬೇಜವಾಬ್ದಾರಿಗೆ ಉದಾಹಣೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಗುತ್ತಿಗೆದಾರರು ಕಾಮಗಾರಿ ಗುತ್ತಿಗೆ ಪಡೆಯಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಸದಸ್ಯ ಮಾಳೇಟೀರ ಪ್ರಶಾಂತ್ ಅವರು ಮಾತನಾಡಿ, ಒಂದಷ್ಟು ಜನರು ನಿವೇಶನ ರಹಿತರು ಎಂದು ಹೇಳಿಕೊಂಡು ಬೇರೆ ಬೇರೆ ಗ್ರಾಮಗಳಲ್ಲಿನ ಜಾಗಗಳಲ್ಲಿ ಸೇರಿಕೊಂಡಿದ್ದಾರೆ. ಇದರಂತೆ ಕೆದಮುಳ್ಳೂರು ವ್ಯಾಪ್ತಿಯಲ್ಲಿ ಕೂಡ ಹೊರಗಿನಿಂದ ಬಂದವರು ಸೇರಿಕೊಂಡಿದ್ದಾರೆ. ಮಳೆಗಾಲದಲ್ಲಿ ಇವರಿಗೆ ತೊಂದರೆಯಾದರೆ ಯಾರು ಹೊಣೆ.
ಇವರನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರು ಸರ್ಕಾರಿ ಜಾಗ ಪಡೆದುಕೊಳ್ಳಬೇಕು. ನಿವೇಶನ ರಹಿತರಿಗೆ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿವೇಶನ ಕಲ್ಪಿಸಬೇಕು ಈ ಬಗ್ಗೆ ಸ್ಥಳೀಯ ಪಂಚಾಯ್ತಿ ಕ್ರಮಕೈಗೊಳ್ಳಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಜೆನ್ನಿಸ್, ಇಒ ಜಯಣ್ಣ ಪಾಲ್ಗೊಂಡಿದ್ದರು.