ಉಡುಪಿ: 109 ಮಂದಿಗೆ ಕೊರೋನಾ ಸೋಂಕು ದೃಢ, 292 ನೆಗೆಟಿವ್

ಉಡುಪಿ (ಉಡುಪಿ ಟೈಮ್ಸ್ ವರದಿ ) ಜು 18: ಉಡುಪಿ ಜಿಲ್ಲೆಯಲ್ಲಿ ಇಂದು 109 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2088 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 292 ಮಂದಿಗೆ ನೆಗೆಟಿವ್ ಬಂದಿದ್ದು, 109 ಮಂದಿಗೆ ಪಾಸಿಟಿವ್ ಬಂದಿದೆ. ಸೋಂಕಿತರನ್ನ ಸಂಬಂಧಪಟ್ಟ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರಲ್ಲಿ 58 ಮಂದಿ ಉಡುಪಿಯವರು , 40 ಮಂದಿ ಕುಂದಾಪುರದವರು ಹಾಗು 11 ಮಂದಿ ಕಾರ್ಕಳ ತಾಲೂಕಿನವರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 49 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 93 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2125 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4537 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1018 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ದಕ್ಷಿಣ ಕನ್ನಡ 509 ಧಾರವಾಡದಲ್ಲಿ 186, ಬಳ್ಳಾರಿಯಲ್ಲಿ 155, ಬೆಳಗಾವಿಯಲ್ಲಿ 137, ವಿಜಯಪುರ 175 ಹಾಗೂ ಯಾದಗಿರಿಯಲ್ಲಿ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 36,631 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 22,498 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೋನಾ ಮರಣ ಪ್ರಮಾಣ ಶೇ.2.08ರಷ್ಟಿದ್ದರೆ, ಬೆಂಗಳೂರಿನಲ್ಲಿ ಶೇ.2.13ರಷ್ಟಿದೆ.

Leave a Reply

Your email address will not be published. Required fields are marked *

error: Content is protected !!